21.7 C
Karnataka
Tuesday, December 3, 2024

    ನ.20ರಿಂದ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ

    Must read

    ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20 ರಿಂದ ನೇಮಕಾತಿ ಆದೇಶಗಳನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಮಂಗಳವಾರ ಬೆಳಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ನವೆಂಬರ್ 20ರಂದು ಮಾನ್ಯ ಮುಖ್ಯಮಂತ್ರಿಗಳು ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಿದ್ದಾರೆಂದು ಅವರು ತಿಳಿಸಿದ್ದಾರೆ.

    ಕಾಲೇಜುಗಳು ಆರಂಭವಾದ ದಿನದಿಂದ ನೇಮಕಾತಿ ಆದೇಶ ಜಾರಿಗೆ ಬರಲಿದ್ದು, ಅದಕ್ಕೂ ಮೊದಲು ನೂತನ ಉಪನ್ಯಾಸಕರಿಗೆ ಇಲಾಖೆಯ ನಿಯಮಗಳು, ಆಡಳಿತ, ವೃಂದ ಮತ್ತು ನೇಮಕಾತಿ ನಿಯಮಗಳು, ಉಪನ್ಯಾಸಕರ ವೃತ್ತಿ ಧರ್ಮ, ವೃತ್ತಿ ಗೌರವ ಸೇರಿದಂತೆ ಪ್ರೇರಣಾದಾಯಕ ತರಬೇತಿ ಕಾರ್ಯಾಗಾರವನ್ನು ಜಿಲ್ಲೆಗಳಲ್ಲಿ ಇಲ್ಲವೇ ವಿಭಾಗಗಳಲ್ಲಿ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ.

    ಕೋವಿಡ್‍ನಿಂದಾಗಿ ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗಳ ಆರ್ಥಿಕ ಮಿತವ್ಯಯ ಆದೇಶವಿದ್ದುದರಿಂದ ಹಾಗೂ ಶಾಲಾ ಕಾಲೇಜುಗಳ ಆರಂಭ ಕುರಿತು ಅನಿಶ್ಚಿತತೆ ಹಿನ್ನೆಲೆಯಲ್ಲಿ ಉಪನ್ಯಾಸಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಸಾಧ್ಯವಾಗಿರಲಿಲ್ಲ. ಈ ಮಿತವ್ಯಯ ಆದೇಶವಿದ್ದರೂ ಸಹ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೌನ್ಸೆಲಿಂಗ್ ನಡೆಸಿ ಸ್ಥಳ ನಿಯುಕ್ತಿಗೆ ಅವಕಾಶ ನೀಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

    ನ. 23ರಿಂದ ಪಿಯು ಉಪನ್ಯಾಸಕ ವರ್ಗಾವಣಾ ಪ್ರಕ್ರಿಯೆ:
    ಪಿಯು ಉಪನ್ಯಾಸಕರ ವರ್ಗಾವಣೆಗೆ ಪ್ರಕ್ರಿಯೆ ನವೆಂಬರ್ 23ರಿಂದ ಆರಂಭವಾಗಲಿದ್ದು, ಅಂದಿನಿಂದಲೇ ಅರ್ಜಿ ಸಲ್ಲಿಕೆಗೆ ಅವಕಾಶವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

    ಈ ಬಾರಿ ಉಪನ್ಯಾಸಕರ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣೆ ಇರುವುದಿಲ್ಲ. ಮುಂದಿನ ಅಧಿವೇಶನದಲ್ಲಿ ಪದವಿಪೂರ್ವ ಶಿಕ್ಷಣ ಉಪನ್ಯಾಸಕರ ವರ್ಗಾವಣಾ ನಿಯಂತ್ರಣ ಕಾಯ್ದೆಗೆ ಸಂಪೂರ್ಣ ತಿದ್ದುಪಡಿ ತಂದು, ಉಪನ್ಯಾಸಕ ಸ್ನೇಹಿಯಾದ ವರ್ಗಾವಣಾ ನೀತಿ ನೀತಿ ಜಾರಿಗೊಳಿಸಲಾಗುವುದೆಂದು ಸಚಿವರು ವಿವರಿಸಿದ್ದಾರೆ.

    ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಪದೋನ್ನತಿ ಮತ್ತು ಸ್ಥಳ ನಿಯುಕ್ತಿ ಪ್ರಕ್ರಿಯೆಗಳು ಈಗಾಗಲೇ ಆರಂಭಗೊಂಡಿದ್ದು, ಪ್ರಕ್ರಿಯೆ ಚಾಲನೆಯಲ್ಲಿದೆ. ಹಾಗೆಯೇ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ನಾಳೆಯಿಂದ ಅಂದರೆ ನ. 18ರಿಂದ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

    ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕ ಹುದ್ದೆ ಭರ್ತಿ:
    ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಇತ್ತೀಚೆಗಷ್ಟೇ ಇಲಾಖೆ ಟಿಇಟಿ ಪರೀಕ್ಷೆಗಳನ್ನು ನಡೆಸಿದ್ದು, ವೃಂದ -ನೇಮಕಾತಿ ನಿಯಮಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಿರುವ ಕಾರಣ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ ಹೆಚ್ಚು ಖಾಲಿ ಹುದ್ದೆಗಳು ಇರುವುದನ್ನು ಗಮನಿಸಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪ್ರಸ್ತಾವನೆ ಮಂಡಿಸಲು ಇಲಾಖೆಯ ಅಧಿಕಾರಿಗಳಿಗೆ ಸುರೇಶ್ ಕುಮಾರ್ ಸೂಚನೆ ನೀಡಿದರು.

    ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಪಿಯು ಇಲಾಖೆ ನಿರ್ದೇಶಕಿ ಸ್ನೇಹಲ್, ಸಾಶಿಇ ಆಯುಕ್ತ ಅನ್ಬುಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!