ನಂಜುಂಡಪ್ಪ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಗುರುವಾರ ಮುಖ್ಯಮಂತ್ರಿಯವರೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂಬಂಧ ಅವಶ್ಯ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯ ಅಳವಡಿಕೆ ನಿಟ್ಟಿನಲ್ಲಿ ನೀತಿ ನಿರೂಪಣೆಗೆ ಶಿಕ್ಷಣ ಆಯೋಗ ಸ್ಥಾಪನೆಗೆ ಮನವಿ ಮಾಡಲಾಗಿದೆ. 50 ವರ್ಷ ಹಳೆಯದಾದ 14613 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡಗಳ ಹಾಗೂ 634 ಸರ್ಕಾರಿ ಪ್ರೌಢಶಾಲೆಗಳ ಕಟ್ಟಡ ನಿರ್ವಹಣೆಗೆ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಮೂಲಕ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ ಎರಡು ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಮಾದರಿ ಶಾಲೆಗಳನ್ನಾಗಿ ಮಾರ್ಪಡಿಸಲು ಯೋಜನೆ ರೂಪಿಸಲಾಗಿದೆ. ಪಂಚಾಯತ್/ವಾರ್ಡ್ ಪಬ್ಲಿಕ್ ಶಾಲೆಗಳ ಸ್ಥಾಪನೆಗೆ ಕ್ರಮ ವಹಿಸುವುದು, ರಾಜ್ಯ ಸಾಕ್ಷರತಾ ಅಭಿಯಾನ ಕಾರ್ಯಕ್ರಮದ ಮೂಲಕ 30 ಸಾವಿರ ಅನಕ್ಷರಸ್ಥರಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಸಾಕ್ಷರತಾ ಕಾರ್ಯಕ್ರಮ ರೂಪಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ವಿವರಿಸಿದರು. ಶಾಖಾ ಗ್ರಂಥಾಲಯಗಳು, ಮಕ್ಕಳ ಗ್ರಂಥಾಲಯಗಳ ಡಿಜಿಟಲೀಕರಣ ಮತ್ತು ಗ್ರಂಥಾಲಯ ತರಬೇತಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾಪವನ್ನು ಹೊಂದಲಾಗಿದೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿ: ಕೇಂದ್ರೀಯ ವಿದ್ಯಾಲಯ ಶಾಲೆಗಳ ಮಾದರಿಯಲ್ಲಿ ರಾಜ್ಯದ 276 ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರಸ್ತಾವೆ ಸಲ್ಲಿಸಲಾಗಿದೆ ಎಂದೂ ಸುರೇಶ್ ಕುಮಾರ್ ತಿಳಿಸಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಹಂಚಿಕೆಯಾದ ಅನುದಾನದಲ್ಲಿ ಶೇ. 79 ರಷ್ಟು ಅನುದಾನ ಅಧಿಕಾರಿ/ಸಿಬ್ಬಂದಿ ವೇತನ ವೆಚ್ಚಗಳಿಗೆ ವಿನಿಯೋಗವಾದರೆ, ಉಳಿದ ಶೇ. 21 ಅನುದಾನವನ್ನು ಇತರೆ ಶೈಕ್ಷಣಿಕ ಚಟುವಟಿಕೆಗಳು, ಮೂಲಸೌಲಭ್ಯಗಳು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮಗಳಿಗೆ ವೆಚ್ಚವಾಗುತ್ತದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರವು ಹೆಚ್ಚು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಒಟ್ಟು 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಇಲಾಖೆಯಡಿ 5459 ಶಾಲಾ ಕಾಲೇಜುಗಳಿದ್ದು, ಒಟ್ಟು 101.42 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಸಾರ್ವಜನಿಕ ಶಿಕ್ಷಣ ಆಯಕ್ತಾಲಯ, ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ರಾಜ್ಯ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ, ಸಮಗ್ರ ಶಿಕ್ಷಣ ಅಭಿಯಾನ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಮತ್ತು ಸರ್ಕಾರಿ ಮುದ್ರಣಾಲಯ ಇಲಾಖೆಗಳನ್ನೊಳಗೊಂಡಿದೆ. ಈ ಇಲ್ಲಾ ಇಲಾಖೆಗಳಡಿಯಲ್ಲಿ ಇದುವರೆಗೆ 2020-21ನೇ ಸಾಲಿನಲ್ಲಿ ಇದುವರೆಗೆ ಹಂಚಿಕೆಯಾದ ಅನುದಾನದಲ್ಲಿ ಈ ತನಕ ಶೇ. 81ರಷ್ಟು ವೆಚ್ಚ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಈ ಬಾರಿ ಶಿಕ್ಷಣ ವಲಯಕ್ಕೆ ಹೆಚ್ಚಿನ ಅದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆಂದು ಸಚಿವರು ತಿಳಿಸಿದರು.
ಸಕಾಲ ಮಿಷನ್ ಅಭಿವೃದ್ಧಿಗೆ ಒತ್ತು:ಸಕಾಲ ಯೋಜನೆಯಡಿ ಸಕಾಲ ಮಿಷನ್ ಕಚೇರಿ ಹುದ್ದೆಗಳ ಹೊಂದಾಣಿಕ ಮತ್ತು ಪುನರ್‍ರಚನೆಯೊಂದಿಗೆ ಕಾರ್ಯನಿರ್ವಹಿಸಲುದ್ದೇಶಿಸಿದ್ದು, ತನಿಖಾ ಶಾಖೆ, ತಾಂತ್ರಿಕ ಶಾಖೆ, ತರಬೇತಿ ಶಾಖೆ ಮತ್ತು ಕುಂದುಕೊರತೆ ಹಾಗೂ ಮಾಹಿತಿ, ಪ್ರಚಾರ ಶಾಖೆಗಳನ್ನೊಳಗೊಂಡಂತೆ ಸಕಾಲ ಮಿಷನ್ ಅಭಿವೃದ್ಧಿಗೆ ಒತ್ತು ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಕಾಲ ಮಿಷನ್ ಸಚಿವರೂ ಆದ ಸುರೇಶ್ ಕುಮಾರ್ ತಿಳಿಸಿದರು.
ಸಕಾಲ ಯೋಜನೆಯಡಿ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಸೇರಿದಂತೆ ದೂರದರ್ಶನ, ರೇಡಿಯೋ, ವೃತ್ತಪತ್ರಿಕೆ ಹಾಗೂ ಬ್ರಾಂಡ್ ಅಂಬಾಸಡರ್ ಮೂಲಕ ಮತ್ತು ವಿವಿಧ ಇಲಾಖೆಗಳ ಮಾಹಿತಿ ಫಲಕಗಳ ಮೂಲಕ ಮಾಹಿತಿ, ಅರಿವು ಮತ್ತು ಸಂವಹನಕ್ಕೆ ಒತ್ತು ನೀಡುವ ಉದ್ದೇಶ ಹೊಂದಲಾಗಿದೆ ಎಂದೂ ಅವರು ವಿವರಿಸಿದರು.