20.6 C
Karnataka
Sunday, September 22, 2024

    ದ್ವಿತೀಯ ಪಿಯು ಪರೀಕ್ಷೆ ಮುಂದಕ್ಕೆ; ಪ್ರಥಮ ಪಿಯು ಪರೀಕ್ಷೆ ಇಲ್ಲದೆ ಪಾಸ್; ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಮ್

    Must read

    ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

    ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು.

    ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

    ಮೊದಲನೆ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್:
    ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

    ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.

    ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ:
    ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ.

    ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಲಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

    ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.

    ಸಭೆ ಪರಿಗಣಿಸಿದ ಅಂಶಗಳು

    ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ.

    ರಾಜ್ಯಾದ್ಯಂತ ಕೋವಿಡ್ ಎರಡನೇ ಅಲೆ ತೀವ್ರವಾಗುತ್ತಿರುವ ಹರಡುತ್ತಿರುವುದು

    ಪರೀಕ್ಷೆಗೆ ಸಹಕಾರ ನೀಡಬೇಕಿದ್ದ ಇಲಾಖೆಗಳು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವುದು ಹಾಗೆಯೇ ಪರೀಕ್ಷೆ ತೆಗೆದುಕೊಳ್ಳಬೇಕಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಊರಿನಲ್ಲಿ ವಾಸ್ತವ್ಯ ಮಾಡಿರುವುದು

    ವಿದ್ಯಾರ್ಥಿಗಳ ಮತ್ತು ಪೋಷಕರ ಮಾನಸಿಕ ಒತ್ತಡಗಳು ಸೇರಿದಂತೆ ಎಲ್ಲ ಆಯಾಮಗಳನ್ನು ಸಮಗ್ರವಾಗಿ ಚರ್ಚಿಸಲಾಯಿತು.

    ಸಿಬಿಎಸ್ಇ ಸೇರಿದಂತೆ ಕೇಂದ್ರ ಮಂಡಳಿ ಪರೀಕ್ಷೆಗಳು ಹಾಗೆಯೇ ಮಧ್ಯಪ್ರದೇಶ, ಜಾರ್ಖಂಡ್, ಮಹಾರಾಷ್ಟ್ರ,ತಮಿಳುನಾಡು, ಹಿಮಾಚಲ ಪ್ರದೇಶ, ಛತ್ತೀಸ್ಘಡ್, ರಾಜಸ್ಥಾನ, ಪಂಜಾಬ್ ಹಾಗೂ ತೆಲಂಗಾಣ ರಾಜ್ಯಗಳ 12ನೇ ತರಗತಿ ಮಂಡಳಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

    ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪರೀಕ್ಷೆ ಮುಂದೂಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

    ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಮತ್ತಿತರರು ಭಾಗವಹಿಸಿದ್ದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!