21.5 C
Karnataka
Sunday, September 22, 2024

    ಮಳೆಗಾಲ ಆರಂಭ; ಜೂನ್23 ರಿಂದ ಆಗಸ್ಟ್ 16ರವರೆಗೆ ಕೊಡಗಿನಲ್ಲಿ ಭಾರಿ ವಾಹನ ಸಂಚಾರ ನಿಷೇಧ

    Must read


    ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮಳೆಗಾಲ ಆರಂಭವಾಗಿದೆ. ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಬಂಧಿಸುವ ಬಗ್ಗೆ ಜಿಲ್ಲಾಡಳಿತ ತೀರ್ಮಾನಿಸಿದೆ.

    ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆ. ಹಾಗೆಯೇ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತದೆ.

    ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ/ ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಬಂಧಿಸಲು ಸಂಬಂಧಪಟ್ಟ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.

    ಜೊತೆಗೆ ರಾಜ್ಯ ಹವಾಮಾನ ಇಲಾಖೆಯಿಂದ ಹೆಚ್ಚಿನ ಮಳೆಯಾಗುವ ದಿನಗಳಲ್ಲಿ 02-03 ದಿನಗಳ ಮುಂಚಿತವಾಗಿ ಆಗಿಂದಾಗ್ಗೆ ವರದಿಯನ್ನು ನೀಡುತ್ತಾ ಬರುತ್ತಿದ್ದಾರೆ. ಇದನ್ನು ಅವಲೋಕಿಸಿ ಮತ್ತು ಕಳೆದ 03 ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ನೆರೆ ಹಾವಳಿಯಿಂದಾಗಿ ಹಲವಾರು ರಸ್ತೆಗಳು ಹಾಳಾಗಿದೆ. ಈ ರಸ್ತೆಗಳನ್ನು ಈಗಾಗಲೇ ಮಳೆಹಾನಿ ದುರಸ್ತಿಯಡಿ ಸರಿಪಡಿಸಲಾಗುತ್ತಿದ್ದು, ಪ್ರಸ್ತುತ ವರ್ಷದ ಮಳೆಗಾಲ ಸಹ ಪ್ರಾರಂಭವಾಗಿದೆ. ಇದರಿಂದ ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಭಾರೀ ವಾಹನ ಸಂಚಾರದಿಂದ ರಸ್ತೆಗೆ ಅಪಾಯವಾಗುವ ಸಾಧ್ಯತೆ ಇರುತ್ತದೆ.

    ಈ ಎಲ್ಲಾ ಅಂಶಗಳನ್ನ ಗಮನಿಸಿ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಇದೇ ಜೂನ್ 23 ರಿಂದ ಆಗಸ್ಟ್ 16 ವರೆಗೆ ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. ಹಾಗೆಯೇ ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳಿಗೆ (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) ನಿರ್ಬಂಧದಿಂದ ವಿನಾಯಿತಿ ನೀಡಿದ್ದಾರೆ.

    ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ರಂತೆ ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ, ಇವರಿಗೆ ಅನುಮತಿಸಿದೆ.

    ಕೊಡಗು ಜಿಲ್ಲೆಯ ಮುಖಾಂತರ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!