ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣ ಗೊಂಡಿದ್ದು, ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ನೀಡಲಾಗಿದೆ.
ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಡಾ|| ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ|| ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ.
ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ರೂ.1.00ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ ರೂ.75,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ರೂ.50,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ರೂ.25,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.