ವಿಸ್ಟಾಡೋಮ್ ಬೋಗಿಗಳನ್ನು ಹೊಂದಿರುವ ಯಶವಂತಪುರ- ಮಂಗಳೂರು ವಿಶೇಷ ರೈಲಿಗೆ ಇಂದು ಸಂಸದ ನಳೀನ್ ಕುಮಾರ್ ಕಟೀಲ್ ಚಾಲನೆ ನೀಡಿದರು. ಇಂದು 88 ಪ್ರಯಾಣಿಕರು ಈ ವಿಶೇಷ ಬೋಗಿಯಲ್ಲಿ ಪಯಣಿಸಿ ಪಶ್ಚಿಮ ಘಟ್ಟಗಳ ರಮಣೀಯ ಸೌಂದರ್ಯ ಸವಿದರು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ , ಮಂಗಳೂರು ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಉಪಸ್ಥಿತರಿದ್ದರು.
ಪ್ರಕೃತಿ ಹಾಗೂ ಕಡಲತೀರದ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಕೋಚ್‌ಗಳನ್ನು ಜೋಡಿಸಲಾಗುತ್ತಿದೆ. ಬೆಂಗಳೂರು-ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಮಂದಿ ಮನವಿ ಮಾಡಿದ್ದರು. ಅದರ ಪ್ರತಿಫಲದಿಂದ ವಿಸ್ಟಾಡೋಮ್ ರೈಲು ಸಂಚಾರ ಆರಂಭವಾಗಿದೆ.
ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗುವ ಈ ರೈಲುಮಾರ್ಗದಲ್ಲಿ ಸಂಚರಿಸುವವರಿಗೆ ಶಿರಾಡಿ ಘಾಟಿಯ ಸೌಂದರ್ಯವನ್ನು ರೈಲಿನೊಳಗೆ ಕುಳಿತು ಸವಿಯುವ ಭಾಗ್ಯ ಸಿಗಲಿದೆ. ಮಾರ್ಗಮಧ್ಯದಲ್ಲಿಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಬಹುದು