26.2 C
Karnataka
Thursday, November 21, 2024

    ಬ್ಯಾಂಕಿಂಗ್ ಪರೀಕ್ಷೆ ಕನ್ನಡದಲ್ಲಿ ನಡೆಸಲು ಸಿದ್ಧರಾಮಯ್ಯ ಆಗ್ರಹ

    Must read

    ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

    ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಕೇಂದ್ರ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯದೊರಕಿಸಿಕೊಡಬೇಕು ಎಂದೂ ಸಿದ್ಧರಾಮಯ್ಯ ಆಗ್ರಹಪಡಿಸಿದ್ದಾರೆ.

    ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3,300 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ.

    2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014ರಲ್ಲಿ ಕೇಂದ್ರ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವಜನರಿಗೆ ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು ಎಂಬುದನ್ನು ಸಿದ್ಧರಾಮಯ್ಯ ನೆನಪಿಸಿದ್ದಾರೆ.

    ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ.

    ಬ್ಯಾಂಕಿಂಗ್ ಕೆಲಸಕ್ಕೆ ಅರ್ಜಿ ಆಹ್ವಾನ: ಅರ್ಹತೆ ಏನು? ಪರೀಕ್ಷೆ ಬರೆಯುವುದು ಹೇಗೆ?

    ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ.

    ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆಬಿಟ್ಟ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ.

    ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನಮಂತ್ರಿಯವರ ಗಮನಸೆಳೆದು ಕನ್ನಡಿಗ ಯುವಜನರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!