21.5 C
Karnataka
Sunday, September 22, 2024

    ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಬಿ.ಎಸ್.ವೈ ಭರವಸೆ

    Must read

    BELAGAVI, JULY 25

    ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು.

    ನೆರೆಯ ಮಹಾರಾಷ್ಟ್ರ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ವ್ಯಾಪಕ ಮಳೆಯಾದ ಪರಿಣಾಮ ಹಿರಣ್ಯಕೇಶಿ, ಕೃಷ್ಣಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ ಸೇರಿದಂತೆ ಜಿಲ್ಲೆಯ ಸಪ್ತ ನದಿಗಳಲ್ಲಿ ಹಾಗೂ ಬೆಳಗಾವಿ ಸಮೀಪದ ಬಳ್ಳಾರಿ ನಾಲಾಗಳಲ್ಲಿ ನೀರಿನ ಹರಿವು ಹೆಚ್ಚಳಗೊಂಡು ಅಕ್ಕಪಕ್ಕದ ಕೆಲ ಗ್ರಾಮಗಳು ಜಲಾವೃತಗೊಂಡಿರುತ್ತವೆ.

    ಹಿರಣ್ಯಕೇಶಿ ನದಿತೀರದಲ್ಲಿರುವ ಸಂಕೇಶ್ವರ ಪಟ್ಟಣದ ಮಠಗಲ್ಲಿ, ಕುಂಬಾರ ಓಣಿ ಹಾಗೂ ನದಿಗಲ್ಲಿಯ ಬಳಿಯ ಮುಳುಗಡೆ ಪ್ರದೇಶಗಳನ್ನು ಮುಖ್ಯಮಂತ್ರಿಗಳು ವೀಕ್ಷಿಸಿದರು.

    ಇದಾದ ಬಳಿಕ ಶಂಕರಲಿಂಗ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಸಂತ್ರಸ್ತರ ಜತೆ ಮಾತನಾಡಿದ ಅವರು, ಸಂಕೇಶ್ವರ ಪಟ್ಟಣದಲ್ಲಿ ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುವ ಮನೆಗಳ ಶಾಶ್ವತ ಸ್ಥಳಾಂತರಕ್ಕೆ ಐವತ್ತು ಎಕರೆ ಭೂಮಿ‌ ಲಭ್ಯವಿದೆ. ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಸಂತ್ರಸ್ತರು ಸಹಕರಿಸಿದರೆ ಐವತ್ತು ಎಕರೆ ಜಾಗೆಯಲ್ಲಿ ಮನೆಗಳನ್ನು ಒದಗಿಸಲಾಗುತ್ತದೆ.ಮೂರ್ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರಿಗೆ ಸಂಕಷ್ಟ. ಸಂಕಷ್ಟಕ್ಕೆ ಒಳಗಾದ ಜನರಿಗೆ ಸೂಕ್ತ ಪರಿಹಾರ ವ್ಯವಸ್ಥೆ ಮಾಡಲಾಗುವುದು.

    ಮಳೆಹಾನಿ ಸಮೀಕ್ಷೆ ಬಳಿಕ ಪರಿಹಾರ:

    ಮಳೆ ನಿಂತ ಬಳಿಕ ಮನೆ ಮನೆ ಸಮೀಕ್ಷೆ ಕೈಗೊಂಡು ನಂತರ ಸೂಕ್ತ ಪರಿಹಾರವನ್ನು ನೀಡಲಾಗುವುದು.

    ತಾತ್ಕಾಲಿಕವಾಗಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಊಟೋಪಹಾರ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಜನರು ಭಯ ಪಡುವ ಅಗತ್ಯವಿಲ್ಲ; ಸರ್ಕಾರ ನಿಮ್ಮ ಜತೆಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ ಅವರು, ಸಂತ್ರಸ್ತರಿಗೆ ಎನ್.ಡಿ.ಆರ್.ಎಫ್.‌ಅಡಿ‌ ಪರಿಹಾರ ವಿತರಣೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಎಲ್ಲರಿಗೂ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

    ಇದಾದ ಬಳಿಕ ನಿಪ್ಪಾಣಿ ತಾಲ್ಲೂಕಿನ ಯಮಗರ್ಣಿ ಗ್ರಾಮದ ಬಳಿ ಅತಿವೃಷ್ಟಿಯಿಂದ ಮುಳುಗಡೆಯಾಗಿರುವ ರಾಷ್ಟ್ರೀಯ ಹೆದ್ದಾರಿ-4 ಅನ್ನು ಸಿಎಂ ಪರಿಶೀಲಿಸಿದರು.

    ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, 630 ಕುಟುಂಬಗಳಿಗೆ ತೊಂದರೆಯಾಗಿದ್ದು, ಐದು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಊಟೋಪಹಾರ ಸೇರಿದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

    ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಹುಕ್ಕೇರಿ ಮತಕ್ಷೇತ್ರದ ಶಾಸಕರೂ ಆಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರಾದ ಉಮೇಶ್ ಕತ್ತಿ ಮತ್ತಿತರರು ಉಪಸ್ಥಿತರಿದ್ದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!