BENGALURU AUG 13
ನನ್ನ ಎರಡೂ ಖಾತೆಗಳ ವಿಚಾರದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದೇನೆ. ವಿದ್ಯುತ್ ಕ್ಷೇತ್ರದಲ್ಲಿ ದೇಶವು ಸ್ವಾವಲಂಬಿ ಆಗಿದೆ. ಮುಂದಿನ ಕೆಲವೇ ತಿಂಗಳುಗಳಲ್ಲಿ ನಾಲ್ಕು ಹೊಸ ರಸಗೊಬ್ಬರ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿದ್ದು, ಯೂರಿಯಾ ಉತ್ಪಾದನೆಯಲ್ಲಿ ದೇಶವು ಶೀಘ್ರವೇ ಸ್ವಾವಲಂಬಿ ಆಗಲಿದೆ ಎಂದು ಕೇಂದ್ರ ಸರಕಾರದ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ್ ಖೂಬಾ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಫ್ಕೋ ಕಂಪೆನಿಯು ಕರ್ನಾಟಕದಲ್ಲಿ ನ್ಯಾನೊ ಯೂರಿಯಾ ಉತ್ಪಾದನಾ ಘಟಕ ಆರಂಭಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ರಾಜ್ಯ ಸರಕಾರವು ಮೂಲಸೌಕರ್ಯ ನೀಡಿದ ಬಳಿಕ ಅದು ರಾಜ್ಯದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನೇತೃತ್ವವನ್ನು ನಮ್ಮ ನೆಚ್ಚಿನ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ವಹಿಸುತ್ತಿದ್ದಾರೆ. ಇದು ಅತ್ಯಂತ ಹೆಮ್ಮೆಯ ವಿಚಾರ ಎಂದರು. ಹಿಂದುಳಿದ ಜಾತಿಗಳನ್ನು ಗುರುತಿಸುವ ರಾಜ್ಯಗಳ ಅಧಿಕಾರವನ್ನು ಮರು ಸ್ಥಾಪಿಸುವ ಮಸೂದೆಗೆ ರಾಜ್ಯಸಭೆಯು ಒಪ್ಪಿಗೆ ನೀಡಿದ್ದು, ಇದೊಂದು ಮಹತ್ವದ ಕ್ರಮ ಎಂದು ಅವರು ಶ್ಲಾಘಿಸಿದರು.