BENGALURU AUG 30
ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಬೇಕೇ ಎಂಬ ಬಗ್ಗೆ ತಾಂತ್ರಿಕ ಶಿಕ್ಷಣ ಸಮಿತಿ ನಿರ್ಧಾರದಡಿ ನಿರ್ಣಯಿಸಬೇಕಾಗಿದೆ ಎಂದರು.
ತಾಂತ್ರಿಕ ಸಲಹಾ ಸಮಿತಿ ಜೊತೆ ಮುಖ್ಯಮಂತ್ರಿಗಳ ಸಭೆಯ ಬಳಿಕ ಶಾಲಾ ತರಗತಿಗಳ ಕುರಿತು ನಿರ್ಧರಿಸಲಿದ್ದೇವೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ. ಶಿಕ್ಷಕರೂ ಶಾಲೆಗಳ ಆರಂಭಕ್ಕೆ ಉತ್ಸುಕರಾಗಿ ಕಾಯುತ್ತಿದ್ದಾರೆ ಎಂದರು. ಯಾಕೆ ಶಾಲೆಗಳನ್ನು ಆರಂಭಿಸುತ್ತಿಲ್ಲ ಎಂದು ಪೋಷಕರೂ ಶಾಲೆಗಳಿಗೆ ಬಂದು ಪ್ರಶ್ನಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಮತ್ತು ಶಾಸಕರ ಇಚ್ಛಾಶಕ್ತಿಯ ಪರಿಣಾಮವಾಗಿ ರಾಜ್ಯದಲ್ಲಿ ದೊಡ್ಡ ತರಗತಿಗಳು ಆರಂಭಗೊಂಡಿವೆ. ಮಕ್ಕಳ ಸಹಭಾಗಿತ್ವ ಮತ್ತು ಪೋಷಕರ ಸಹಕಾರ ಪೂರ್ಣವಾಗಿ ಲಭಿಸಿದೆ. ಬಹುತೇಕ ಶೇ 70ರಷ್ಟು ಮಕ್ಕಳು ಶಾಲೆಗಳಿಗೆ ಬರುತ್ತಿದ್ದಾರೆ ಎಂದು ವಿವರಿಸಿದರು.
ಮುಖ್ಯಮಂತ್ರಿಗಳು ಮಕ್ಕಳ ಜೊತೆ ಸಂವಾದ ನಡೆಸಿದಾಗ ಆನ್‍ಲೈನ್ ತರಗತಿಗಳಿಂದ ಹೆಚ್ಚಿನ ಪ್ರಯೋಜನ ಆಗುತ್ತಿಲ್ಲ ಎಂಬುದು ಗೊತ್ತಾಗಿದೆ. ಅನೇಕ ಮಕ್ಕಳು ಇಡೀ ದಿನ ಶಾಲಾ ತರಗತಿ ನಡೆಸಲು ಮತ್ತು ಕುಡಿಯುವ ನೀರು ಹಾಗೂ ಬುತ್ತಿ ತರಲು ಅವಕಾಶ ಕೊಡುವಂತೆ ಸಿಎಂ ಅವರಲ್ಲಿ ಮನವಿ ಮಾಡಿದ್ದಾರೆ ಎಂದರು.
ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಮೂಲಸೌಕರ್ಯ ಚೆನ್ನಾಗಿದ್ದು, ಕೋವಿಡ್ ಮಾರ್ಗಸೂಚಿ ಪಾಲನೆ ಕಷ್ಟವಾಗಲಾರದು. ಶಾಲೆಗಳ ಆರಂಭದ ಬಳಿಕ ಕೋವಿಡ್ ಸಂಖ್ಯೆಯಲ್ಲಿ ಹೆಚ್ಚಳ ಆಗಿಲ್ಲ ಎಂದೂ ಅವರು ಪ್ರಶ್ನೆಗೆ ಉತ್ತರ ನೀಡಿದರು.