BENGALURU SEP 24
2021ನೇ ಸಾಲಿನಿಂದ ರಾಜ್ಯದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುವ ಯೋಜನೆ ಹಾಕಿಕೊಳ್ಳಲಾಗಿದ್ದು, ಮೊದಲ ಪ್ರಶಸ್ತಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಲಭಿಸಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಅಧಿವೇಶನದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ , ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಶಸ್ತಿ ಸ್ವೀಕರಿಸಿದ ನಂತರ ಟ್ವೀಟ್ ಮಾಡಿರುವ ಬಿ ಎಸ್ ಯಡಿಯೂರಪ್ಪ ಜನಪ್ರತಿನಿಧಿಯಾಗಿ, ಪ್ರಜಾಪ್ರಭುತ್ವದ ದೇಗುಲದಲ್ಲಿ ಜನರ ಆಶೋತ್ತರಗಳ ಈಡೇರಿಕೆಯ ದೊಡ್ಡ ಜವಾಬ್ದಾರಿಯ ಅರಿವಿನೊಂದಿಗೆ, ಶಾಸಕಾಂಗದ ಕರ್ತವ್ಯಗಳನ್ನು ನಿರ್ವಹಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ. ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲಿ ಪ್ರಥಮ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಅತ್ಯಂತ ವಿನೀತ ಭಾವದಿಂದ ಸ್ವೀಕರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಈ ಪ್ರಶಸ್ತಿಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರ ಆಯ್ಕೆ ನಿಜಕ್ಕೂ ಅತ್ಯಂತ ಸೂಕ್ತವಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ ಅವರು ತಿಳಿಸಿ ಬಿಎಸ್ ವೈ ಅವರನ್ನು ಅಭಿನಂದಿಸಿದ್ದಾರೆ.