BENGALURU NOV 27
ರಾಜ್ಯದ ಕೆಲವು ಭಾಗಗಳಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ omicron ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯ ವಿವರಗಳನ್ನು ಕಂದಾಯ ಸಚಿವ ಆರ್ ಅಶೋಕ ವರದಿಗಾರರಿಗೆ ತಿಳಿಸಿದರು.
ಕೇರಳ, ಮಹಾರಾಷ್ಟ್ರ ಗಡಿಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಮೈಸೂರು, ಕೊಡಗು, ಚಾಮರಾಜನಗರ, ಮಂಗಳೂರು ಸೇರಿದಂತೆ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲು ಸೂಚಿಸಲಾಗಿದೆ ಎಂದು ಅಶೋಕ್ ತಿಳಿಸಿದರು.
ಈಗಾಗಲೇ ಕೇರಳದಿಂದ ಬಂದಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಕೋವಿಡ್ ಟೆಸ್ಟ್ ಗೆ ಒಳಗಾಗುವುದು ಕಡ್ಡಾಯವಾಗಿದೆ. ಗಡಿ ದಾಟಿ ಬರುವವರಿಗೆ ಆರ್ ಟಿಪಿಸಿ ಆರ್ ಟೆಸ್ಟ್ ಕಡ್ಡಾಯ. ಹೋಟೆಲ್, ಕಚೇರಿ, ಮಾಲ್ ಸಿಬ್ಬಂದಿಗಳಿಗೆ 2 ಡೋಸ್ ಲಸಿಕೆ ಕಡ್ಡಾಯ. ಮುಂದಿನ ದಿನಗಳಲ್ಲಿ ಕೊರೊನಾ ಸ್ಥಿತಿಗತಿ ನೋಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಮಾರ್ಗಸೂಚಿ ಬಗ್ಗೆ ಇನ್ನೊಂದು ಸಭೆ ನಡೆಸಿ ನಿರ್ಧರಿಸಲಾಗುವುದು. ಹೊಸ ರೂಪಾಂತರಿ ವೈರಸ್ ಈಗಿರುವ ವೈರಸ್ ಗಿಂತ ಐದು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಮದುವೆ ಸೇರಿದಂತೆ ಎಲ್ಲಾ ಸಭೆ ಸಮಾರಂಭಗಳಲ್ಲೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿದರು.
ಸಭೆಯಲ್ಲಿನ ಪ್ರಮುಖಾಂಶಗಳು:
* ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.
* ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
* ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.
* ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.
* 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು
* ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.
* ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
*ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.
* ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.
* ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸೂಚನೆ
• ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
• ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.
* ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.