BENGALURU FEB 11
ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ಫೆ.16ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಶುಕ್ರವಾರ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಥಮ ದರ್ಜೆ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಇದು ಅನ್ವಯಿಸುತ್ತದೆ. ಆದರೆ, ಈ ಅವಧಿಯಲ್ಲಿ ಆನ್ಲೈನ್ ಬೋಧನೆ ಎಂದಿನಂತೆಯೇ ನಡೆಯಲಿದೆ. ಜೊತೆಗೆ, ಈಗಾಗಲೇ ನಡೆಯುತ್ತಿರುವ ಮತ್ತು ನಿಗದಿಯಾಗಿರುವ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಿ, ಕಾಲೇಜು ಪುನಾರಂಭದ ಬಗ್ಗೆ ಫೆ.16ರ ಹೊತ್ತಿಗೆ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.